ಬೆಳ್ತಂಗಡಿ : ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ.3 ರಂದು ಸಂಜೆ 5.15ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಪೊಲೀಸರು ಪಂಚರೊಂದಿಗೆ ನಿರ್ಮುಡ ಪ್ರದೇಶಕ್ಕೆ ದಾಳಿ ನಡೆಸಿದಾಗ ಆರೋಪಿಗಳು ಕೋಳಿಗಳ ಕಾಲುಗಳಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ ಪರಸ್ಪರ ಕಾದಾಟಕ್ಕೆ ಬಿಡುವುದರ ಮೂಲಕ ಹಣವನ್ನು ಪಣವಾಗಿಟ್ಟುಕೊಂಡು ಸಂಘಟಿತವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿದೆ.
ಪೊಲೀಸರನ್ನು ಕಂಡ ಕೂಡಲೇ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ನಿರ್ಮುಡ ನಿವಾಸಿ ಧರ್ಣಪ್ಪ ಗೌಡ (38ವ) ಹಾಗೂ ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ನಿವಾಸಿ ಹರೀಶ್ ಎಸ್. (30ವ) ಎಂದು ಗುರುತಿಸಲಾಗಿದೆ.
ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗಿದ್ದ 350 ನಗದು, ಎರಡು ಬಾಳು (ಸಣ್ಣ ಕತ್ತಿ), ವಿವಿಧ ಜಾತಿಯ ನಾಲ್ಕು ಕೋಳಿಗಳು ಹಾಗೂ ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 74,370 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್. ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Discover more from Nammura Suddi
Subscribe to get the latest posts sent to your email.
