ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಅವರು ಕಲ್ಲಿನ ಕೊರೆಗೆ ದಾಳಿ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಎಫ್.ಐ.ಆರ್. ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ನಂತರ ಶಾಸಕ ಹರೀಶ್ ಪೂಂಜರವರು ಠಾಣೆಗೆ ಬಂದು ಶಶಿರಾಜ್ ಶೆಟ್ಟಿಯವರ ಮೇಲೆ ಸುಳ್ಳು ಆರೋಪವನ್ನು ಮಾಡಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾಗ ಪಿಎಸ್‌ಐ ಗೆ ಬೆದರಿಕೆ ಹಾಕಿ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲಂತಬೆಟ್ಟಿನಲ್ಲಿ ಅಕ್ರಮ ಕಲ್ಲಿನ ಕೊರೆ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಬೆಳ್ತಂಗಡಿ ಪೊಲೀಸರು ಮೇ 18 ರಂದು ದಾಳಿ ಮಾಡಿ ಹಿಟಾಚಿ, ಕಂಪ್ರೆಷರ್ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಮೋದ್ ಗೌಡ ಮತ್ತು ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಶಶಿರಾಜ್ ಶೆಟ್ಟಿ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ಈ ವೇಳೆ ರಾತ್ರೋರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿ ಶಶಿರಾಜ್ ಬಿಡುಗಡೆ ಮಾಡಲು ಪಟ್ಟು ಹಿಡಿದಿದ್ದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ಅವರಿಗೆ ಬೆದರಿಕೆ ಹಾಕಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಅಗಿತ್ತು.
ಈ ಪ್ರಕರಣದ ವಿಡಿಯೋ ವೈರಲ್ ಅಗಿರುವ ಹಿನ್ನೆಲೆ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಮೇ 19 ರಂದು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐ.ಪಿ.ಸಿ. 353, 504 ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.