ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜು (12ನೇ ತರಗತಿ ವರೆಗೆ) ಗಳಿಗೆ ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ ದಿನಾಂಕ 03-07-2026 ರಂದು ರಜೆಯನ್ನು ಘೋಷಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಎಚ್ಚರಿಸಿದ್ದಾರೆ.


ಉಳಿದಂತೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವಂತೆ ತಿಳಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು. Toll Free No: 1077, 0824-2442590